70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಸಮಯದಲ್ಲಿಯೇ ಕನ್ನಡದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವರು ಪತ್ರವೊಂದನ್ನು ಬರೆದಿದ್ದಾರೆ. ಮುಖ್ಯಮಂತ್ರಿಗಳಿಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಕೋರಿ ಮಹತ್ವದ ವಿಚಾರದ ಕುರಿತು ಗಮನ ಸೆಳೆದಿದ್ದಾರೆ.
ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವೊಂದನ್ನು ಬರೆದಿದ್ದಾರೆ. ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕೇಂದ್ರ ಸಚಿವರು ಕೋರಿದ್ದಾರೆ.
ಕುಮಾರಸ್ವಾಮಿ ಪತ್ರದ ವಿವರ: ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ.
ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು, ಯುವ ಜನರು ಮೊಬೈಲ್‌ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವಿಪುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ, ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ ಎಂದು ಕರೆ ನೀಡಿದ್ದಾರೆ.
ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.
ಕನ್ನಡ ಪುಸ್ತಕಗಳ ಮೇಲೆ ಶೇ.50 ರಷ್ಟು ರಿಯಾಯಿತಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ಸಿಗಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ಮೂಲಕ ಆನ್‍ಲೈನ್ ಮೂಲಕವೂ ಪುಸ್ತಕ ಖರೀದಿ ಮಾಡಿದರೆ ಸಹ ಶೇ.50 ರಷ್ಟು ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ.
ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


