ಶಿವಮೊಗ್ಗ: ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇ ರೀತಿ ಪೈಪೋಟಿ ಇದೆ. ಆದರೆ ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷನಾಗುತ್ತೇನೆಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ಈಗ ಫೈನಲ್ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಇಲ್ಲಿಯವರೆಗೂ ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದರು.
ಇನ್ನೂ ನಮ್ಮ ಪಕ್ಷದಿಂದ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಎಲ್ಲಾ ಕಾರ್ಯಕರ್ತರಿಗೆ ಗೊತ್ತಿದೆ. ಅಲ್ಲದೇ ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ. ಹೀಗಾಗಿ ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


