ಮಾಜಿ ಸಚಿವ ಮತ್ತು ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ನಿಧನ ಹೊಂದಿದರು. ಅನಾರೋಗ್ಯದ ಕಾರಣ ಹಲವು ದಿನದಿಂದ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಂಗಳವಾರ ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ (79) ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಚ್.ವೈ.ಮೇಟಿ ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದರು.
4 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೂ ಆದ ಹೆಚ್.ವೈ.ಮೇಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು.
ಸಿದ್ದರಾಮಯ್ಯ ಸಂತಾಪ: ಹೆಚ್.ವೈ.ಮೇಟಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
‘ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬುಧವಾರ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿ ಅಂತ್ಯಕ್ರಿಯೆ ನಡೆಯಲಿದ್ದು, ಸಿದ್ದರಾಮಯ್ಯ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಭದ್ರಕೋಟೆ ಕೆಡವಿದ್ದ ಮೇಟಿ. ಹೌದು ಹೆಚ್.ವೈ.ಮೇಟಿ ಮೊದಲು ಜನತಾದಳದಲ್ಲಿದ್ದರು. 2008ರಲ್ಲಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. 1996ರ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್.ವೈ.ಮೇಟಿ ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
1952 ರಿಂದ 1996ರ ತನಕ ನಡೆದ 10 ಚುನಾವಣೆಗಳಲ್ಲಿ 44 ವರ್ಷ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು. ಆದರೆ 1996ರಲ್ಲಿ ಹೆಚ್.ವೈ.ಮೇಟಿ ಅವರು 2,50,683 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಸಿದ್ದು ನ್ಯಾಮಗೌಡ 2,29,351 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಗುಳೇದಗುಡ್ಡ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಶಾಸಕರಾಗಿ, ಅರಣ್ಯ ಸಚಿವರಾಗಿ, ಸಂಸದರಾಗಿ ಹೆಚ್.ವೈ.ಮೇಟಿ ಕಾರ್ಯ ನಿರ್ವಹಣೆ ಮಾಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಹಿರಿಯ ನಾಯಕನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಖಾತೆಯ ಹೊಣೆಯನ್ನು ನೀಡಿದ್ದರು.
ಸದ್ದು ಮಾಡಿದ್ದ ಸಿಡಿ: 2013ರ ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆಗ ಹೆಚ್.ವೈ.ಮೇಟಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅಬಕಾರಿ ಖಾತೆ ಹೊಣೆ ನೀಡಿದ್ದರು.
2016ರಲ್ಲಿ ಅಬಕಾರಿ ಸಚಿವ ಹೆಚ್.ವೈ.ಮೇಟಿ ರಾಸಲೀಲೆ ನಡೆಸಿದ್ದಾರೆ ಎಂಬ ವಿಡಿಯೋ ಹೊರಬಂದಿತ್ತು. ಸ್ಥಳೀಯ ಸುದ್ದಿ ವಾಹಿನಿಗಳು ವಿಡಿಯೋ ಪ್ರಸಾರ ಮಾಡಲು ಪ್ರಾರಂಭಿಸಿದ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಚಿವರ ರಾಜೀನಾಮೆ ಸ್ವೀಕಾರ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ‘ಅಬಕಾರಿ ಸಚಿವ ಶ್ರೀ ಎಚ್‌ವೈ ಮೇಟಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಅಂಗೀಕರಿಸುವಂತೆ ನಾನು ಗೌರವಾನ್ವಿತ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದೇನೆ. ತನಿಖೆಗೂ ಆದೇಶಿಸಿದ್ದೇನೆ’ ಎಂದು ಹೇಳಿದ್ದರು. ಈ ಪ್ರಕರಣದ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


