ಕರ್ನಾಟಕ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೆ ತಂದಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಯೋಜನೆ ಇದು. ಈಗ ಈ ಯೋಜನೆ ಕುರಿತು ಅಪ್‌ಡೇಟ್ ಮಾಹಿತಿ ಒಂದಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಪ್ರತಿಭಾ.ಕೆ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-3) ಆದೇಶವನ್ನು ಹೊರಡಿಸಿದ್ದಾರೆ.
ಆದೇಶವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕಂತಿನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು, ಇವರ ಕಡತವನ್ನು ಉಲ್ಲೇಖಿಸಲಾಗಿದೆ.
ಪ್ರಸ್ತಾವನೆ: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಅನುಷ್ಠಾನಗೊಳಿಸಲು ನಿರ್ಧರಿಸಿದೆ.
ಹಲವು ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದ್ದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು, 2025-26ನೇ ಸಾಲಿನಲ್ಲಿ ಲೆಕ್ಕ ಶೀರ್ಷಿಕೆ 2210-80-800-0-28- ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-021-ವೈದ್ಯಕೀಯ ವೆಚ್ಚದ ಮರುಪಾವತಿ ಅಡಿಯಲ್ಲಿ ಹಂಚಿಕೆಯಾಗಿರುವ ರೂ. 500 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡುವಂತೆ ಸುವರ್ಣ ಆರೋಗ್ಯ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕರು ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸಮರ್ಪಕವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು, 2025-26ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ರೂ. 500 ಕೋಟಿಗಳ ಅನುದಾನದಲ್ಲಿ ಮೊದಲನೆ ತ್ರೈಮಾಸಿಕ ಕಂತಾಗಿ ರೂ.125 ಕೋಟಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿ, ಆದೇಶಿಸಿದೆ.
ಸರ್ಕಾರದ ಆದೇಶ; ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸಮರ್ಪಕವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು 2025-26ನೇ ಆರ್ಥಿಕ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2210-80-800-0-28-ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-021-ವೈದ್ಯಕೀಯ ವೆಚ್ಚದ ಮರುಪಾವತಿ ಅಡಿ ಮೊದಲನೇ ತ್ರೈಮಾಸಿಕ ಕಂತಿನ ಮೊತ್ತ ಒಟ್ಟು ರೂ. 125 ಕೋಟಿಗಳ ಅನುದಾನವನ್ನು ನಿರ್ದೇಶಕರು (ಹಣಕಾಸು), ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿ ಆದೇಶಿಸಿದೆ.
ಈ ಅನುದಾನವನ್ನು ನಿರ್ದೇಶಕರು (ಹಣಕಾಸು), ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಇವರ ಡಿಡಿಓ ಕೋಡ್ 999990ಗೆ ಖಜಾನೆ ನೆಟ್‌ವರ್ಕ್ ಮಾನಿಟರಿಂಗ್ ಸೆಂಟರ್ ಮುಖಾಂತರ ಅಪ್‌ಲೋಡ್ ಮಾಡುವುದು.
ಈ ಆದೇಶದನ್ವಯ ಬಿಡುಗಡೆ ಮಾಡಿರುವ ಅನುದಾನವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವರು ಮಂಜೂರು ಮಾಡಿರುವ ಉದ್ದೇಶಗಳಿಗಾಗಿ ನಿಯಮಾನುಸಾರ ಬಳಸಿಕೊಂಡು ವಿನಿಯೋಗಿತಾ ಪ್ರಮಾಣ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದು. ಈ ಆದೇಶವನ್ನು ಆರ್ಥಿಕ ಇಲಾಖೆಯ ಸಹಮತಿಯನ್ವಯ ಹೊರಡಿಸಲಾಗಿದೆ ಎಂದು ಹೇಳಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


