ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಾಗೋದು ಪಕ್ಕಾ ಎನ್ನಲಾಗುತ್ತಿದೆ.
ಈ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಬರುವ ಸೋಮವಾರ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಮೈತ್ರಿ ಬಗ್ಗೆ ಖಚಿತ ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರು ತಮ್ಮನ್ನು ಭೇಟಿಯಾಗುವಂತೆ ನಿಖಿಲ್‌ಗೆ ಸಮಯ ನಿಗದಿ ಮಾಡಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಇಂದು ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ತಂದುಕೊಟ್ಟಿದೆ.
ರಾಜ್ಯದ ಜನರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


