ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಸ್ಥಿತಿಯಲ್ಲೇ ಇಂದು ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಣ ಬಡಿದಾಟಕ್ಕೆ ಅಂಕುಶ ಹಾಕುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಭಾಗಿಯಾಗಲಿದ್ದಾರೆ.
ಬೆಳಗ್ಗೆಯಿಂದ ದಿನಪೂರ್ತಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಇತ್ತೀಚಿನ ವಿದ್ಯಮಾನಗಳ ಕುರಿತು ಚರ್ಚೆ ನಡೆಯಲಿದೆ. ಪ್ರಮುಖವಾಗಿ ಸ್ವಪಕ್ಷೀಯರ ವಿರುದ್ಧವೇ ಬೆಂಕಿ ಉಗುಳುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ, ಪಕ್ಷ ಸಂಘಟನೆ ಇತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
ಶಿಗ್ಗಾವಿ, ಸಂಡೂರ್ ಮತ್ತು ಚನ್ನಪಟ್ಟಣದಲ್ಲಿ ಪಕ್ಷದ ಸೋಲಿಗೆ ರಾಜ್ಯ ಉಸ್ತುವಾರಿ ಅಗರ್ವಾಲ್ ಮಾಹಿತಿ ಪಡೆಯಲಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ತನೆ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಪದೇ ಪದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುರಿತಾಗಿ ಯತ್ನಾಳ್‍ಆರೋಪ ಮಾಡುತ್ತಾ ಬಂದಿದ್ದಾರೆ. ಯತ್ನಾಳ್ ಅವರ ಈ ವರ್ತನೆಯನ್ನು ತಿದ್ದುಕೊಳ್ಳುವಂತೆ ಸಭೆಯಲ್ಲಿ ಒತ್ತಾಯಿಸಲಾಗುತ್ತದೆ.
ವಿಧಾನಸಭೆ ಅಧಿವೇಶನದಲ್ಲೂ ಯಡಿಯೂರಪ್ಪ ವಿರುದ್ಧ ಮಾತನಾಡಿದ್ದಾರೆ. ಯತ್ನಾಳ್ ಈ ವರ್ತನೆ ಬಿಜೆಪಿಗೆ ಮುಜುಗರ ತಂದೊಡ್ಡುತ್ತಿದೆ. ಈಗಾಗಲೇ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕಾರ ಎಂಪಿ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಬಹಿರಂಗವಾಗಿಯೇ ಗುಡುಗಿದ್ದಾರೆ.
ಇನ್ನು ಯತ್ನಾಳ್ ವರ್ತನೆ ಬಗ್ಗೆ ಶಾಸಕರು ರಾಧಾಮೋಹನ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ದೂರು ನೀಡುವ ಸಾಧ್ಯತೆಯೂ ಇದೆ. ಅಷ್ಟೇ ಅಲ್ಲದೆ ಕೋರ್ ಕಮಿಟಿ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಯತ್ನಾಳ್‍ಗೆ ನೋಟಿಸ್ ಕೊಟ್ಟರೂ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿರುವ ಕುರಿತಾಗಿ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಬಂಡಾಯದ ಬೆಂಕಿ ತಣಿಯುವಂತೆ ಕಾಣುತ್ತಿಲ್ಲ. ಬುಧವಾರವಷ್ಟೇ ಶಿಸ್ತು ಸಮಿತಿ ಮುಂದೆ ಹಾಜರಾಗಿದ್ದ ಯತ್ನಾಳ್ ತಂಡ ಮತ್ತೆ ದೆಹಲಿಯಲ್ಲೇ ಸಭೆ ಸೇರಿದೆ. ಈ ಮೂಲಕ ಒಗ್ಗಟ್ಟು ಪ್ರದರ್ಶಿಸಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮುಂದೆ ಹಾಜರಾಗಿ ಬಂದ ನಂತರ ಯತ್ನಾಳ್ ತುಸು ಮೌನವಾದಂತೆ ಕಾಣುತ್ತಿದ್ದರೂ, ವಾಸ್ತವ ಹಾಗಿಲ್ಲ ಎಂದು ಸಭೆ ನಡೆಸಿ ಸಾಬೀತು ಮಾಡಿದ್ದಾರೆ. ಇದರ ಮಧ್ಯೆ ಶನಿವಾರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇನಾಗುತ್ತದೆಯೋ ಕಾದು ನೋಡಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


