ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ತಯಾರಿ ನಡೆಸಿದ್ದು, ಶನಿವಾರ ಮತ್ತು ಭಾನುವಾರ ಅಧಿಕಾರಿಗಳು, ಪೊಲೀಸರು ಬೆಳಗಾವಿಗೆ ತೆರಳಲಿದ್ದಾರೆ.
ಡಿಸೆಂಬರ‌್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಸರ್ಕಾರಕ್ಕೆ ಚಳಿ ಬಿಡಿಸಲು ಬಿಜೆಪಿ-ಜೆಡಿಎಸ್ ಪಕ್ಷದ ಸದಸ್ಯರು ತಯಾರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಶನದ ಕುರಿತು ಎರಡು ಬಾರಿ ಉಪಹಾರಕೂಟದಲ್ಲಿ ಚರ್ಚೆಯನ್ನು ನಡೆಸಿದ್ದಾರೆ. “ಡಿಸೆಂಬರ್ 8 ರಂದು ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಧಿವೇಶನಕ್ಕೆ ಸಿದ್ಧತೆ: ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ ಸಮಿತಿಗಳು ತಮಗೆ ನೀಡಲಾಗಿರುವ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದ್ದಾರೆ.
ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿ ವಸತಿ, ಊಟೋಪಹಾರ, ಸಾರಿಗೆ ಮತ್ತಿತರ ವ್ಯವಸ್ಥೆಗಳನ್ನು ಖಚಿತಪಡಿಸಿಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಅಧಿವೇಶನದ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ,-ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯದ್ವಾರದಿಂದ ಸುವರ್ಣ ವಿಧಾನ ಸೌಧದವರೆಗೆ ಕರೆತರಲು ನಿಯಮಿತವಾಗಿ ಮಿನಿಬಸ್ ವ್ಯವಸ್ಥೆ ಕಲ್ಪಿಸಬೇಕು. ಅಧಿವೇಶನದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗೆ ಸೂಕ್ತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತ್ಯೇಕ ಊಟದ ಕೌಂಟರ್‌ಗಳ ವ್ಯವಸ್ಥೆ ಮಾಡಬೇಕು ಎಂದರು.
ಅಧಿವೇಶನಕ್ಕೆ ಆಗಮಿಸುವ ಹಿರಿಯ ಅಧಿಕಾರಿಗಳಿಗೆ ಲೈಸನ್ ಅಧಿಕಾರಿಗಳನ್ನು ನೇಮಕ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಲೈಸನ್ ಅಧಿಕಾರಿಗಳು ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಬೇಕು. ಕಳೆದ ಬಾರಿಯಂತೆ ಈ ಬಾರಿಯೂ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ತಮ್ಮ ಜವಾಬ್ದಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಅಧಿವೇಶನ ವೀಕ್ಷಣೆಗೆ ಆಗಮಿಸುವ ವಿವಿಧ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳ ಕುರಿತು ಮುಂಚಿತವಾಗಿ ಆಯಾ ಶಾಲೆಗಳ ಮಾಹಿತಿ ಪಡೆದುಕೊಳ್ಳಬೇಕು. ಬೇರೆ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೆಶಕರುಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ವಿದ್ಯಾರ್ಥಿಗಳ ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಅಧಿವೇಶನದ ಭದ್ರತೆಗೆ ಆಗಮಿಸುವ ಪೊಲೀಸರ ವಾಸ್ತವ್ಯ, ಊಟದ ವ್ಯವಸ್ಥೆಗಾಗಿ ಟೆಂಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಪೊಲಿಸ್ ಆಯಕ್ತರಾದ ಭೋರಸೆ ಗುಲಾಬರಾವ್ ವಿವಿಧ ಬಗೆಯ ಪಾಸ್ ವಿತರಣೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸಹ ಭದ್ರತಾ ಕಾರ್ಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


