ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಉತ್ತರ ಕನ್ನಡ ಜಿಲ್ಲೆಯೂ ಒಂದು. ಸಮುದ್ರ ತೀರ, ಪಶ್ಚಿಮ ಘಟ್ಟಗಳು ಇರುವ ಜಿಲ್ಲೆಗೆ ಪ್ರವಾಸಕ್ಕಾಗಿ ದೇಶ-ವಿದೇಶದ ಪ್ರವಾಸಿಗರು ಆಗಮಿಸುತ್ತಾರೆ. ಜಿಲ್ಲೆಯ ಸಮುದ್ರ ತೀರದಲ್ಲಿ ಪ್ರವಾಸಕ್ಕೆ ಬಂದ ಜನರು ಸ್ಥಳೀಯರ ಎಚ್ಚರಿಕೆಯನ್ನು ಪರಿಗಣಿಸದೇ ಜೀವ ಕಳೆದುಕೊಂಡ ಪ್ರಕರಣಗಳು ನಡೆದಿವೆ.
ಈಗ ಉತ್ತರ ಕನ್ನಡ ಜಿಲ್ಲಾಡಳಿತ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ರಕ್ಷಣೆಗೆ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸಭೆಯನ್ನು ನಡೆಸಿದ್ದಾರೆ.
“ಜಿಲ್ಲೆಯಲ್ಲಿ ಪ್ರಸ್ತುತ ಪ್ರವಾಸಿ ಚಟುವಟಿಕೆಗಳು ಹೆಚ್ಚಾಗಿದ್ದು, ಅಧಿಕ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಜಿಲ್ಲೆಯ ಬೀಚ್‌ಗಳಿಗೆ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಬೀಚ್‌ನಲ್ಲಿ ಯಾವುದೇ ಜೀವಹಾನಿ ಸಂಭವಿಸದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಡಲ ತೀರದಲ್ಲಿ ಕಟ್ಟೆಚ್ಚರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮತ್ತು ಮುರುಡೇಶ್ವರ ಕಡಲ ತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಸಮುದ್ರದ ತೀರದ ಅಪಾಯಗಳ ಕುರಿತು ಸೂಚನಾ ಫಲಕಗಳನ್ನು ಬೀಚ್‌ನ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು ಎಂದು ತಿಳಿಸಲಾಗಿದೆ.
ಪ್ರವಾಸಿಗರಿಗೆ ಅಪಾಯದ ಬಗ್ಗೆ ಸೈರನ್ ಮತ್ತು ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾಚ್ ಟವರ್‌ಗಳ ಮೂಲಕ ಪ್ರವಾಸಿಗರು ಸಮುದ್ರದಲ್ಲಿನ ಅಪಾಯದ ಸ್ಥಳಗಳಿಗೆ ತೆರಳದಂತೆ ನಿರಂತರ ಗಮನಹರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಬೀಚ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೀವ ರಕ್ಷಕರನ್ನು ನೇಮಿಸುವಂತೆ ಮತ್ತು ಸಾಕಷ್ಟು ಸಂಖ್ಯೆಯ ಹೋಂ ಗಾರ್ಡ್‌ಗಳನ್ನು ನಿಯೋಜಿಸಬೇಕು. ಎಲ್ಲಾ ಬೀಚ್‌ಗಳಲ್ಲಿ ವಾಹನಗಳ ಪಾರ್ಕಿಂಗ್‌ಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಬೀಚ್‌ಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕ ರೀತಿಯಲ್ಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಡಿಸಿ ತಿಳಿಸಿದ್ದಾರೆ.
ಪ್ರವಾಸಿಗರು ಬೋಟ್‌ಗಳಲ್ಲಿ ತೆರಳುವಾಗ ಕಡ್ಡಾಯವಾಗಿ ಜೀವ ರಕ್ಷಕ ಜಾಕೆಟ್‌ಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು ಹಾಗೂ ಬೀಚ್‌ನಲ್ಲಿ ಜೀವ ರಕ್ಷಕರಿಗೆ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಸುರಕ್ಷತಾ ಪರಿಕರಗಳನ್ನು ಪೂರೈಸುವುದರ ಜೊತೆಗೆ ಅವರಿಗೆ ಜೀವ ವಿಮೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಂಪೂರ್ಣವಾಗಿ ನೀಡಬೇಕು ಎಂದು ಸೂಚಿಸಿದರು.
ಮುರುಡೇಶ್ವರ ಬೀಚ್‌ನಲ್ಲಿ ಅಪಾಯವಲ್ಲದ ಸಮುದ್ರ ಪ್ರದೇಶದ ಕುರಿತು ಮಾರ್ಕಿಂಗ್ ಮಾಡಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆಗೆ ಜೆಟ್ ಸ್ಕೀ, ಪ್ರಥಮ ಚಿಕಿತ್ಸಾ ಕಿಟ್‌ಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು.
ಪಾರ್ಕಿಂಗ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ನಿರಂತರವಾಗಿ ಎಚ್ಚರಿಕೆಯ ಸಂದೇಶಗಳನ್ನು ಪ್ರಸಾರ ಮಾಡಬೇಕು, ಸುರಕ್ಷತಾ ಪರಿಕರಗಳು ಸೇರಿದಂತೆ ಯಾವುದೇ ರೀತಿಯ ನೆರವುಗಳ ಅಗತ್ಯವಿದ್ದಲ್ಲಿ ಬೇಡಿಕೆ ಸಲ್ಲಿಸಿ, ಸಾಕಷ್ಟು ಮುಂಚಿತವಾಗಿ ಪಡೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ.
ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಗರಿಷ್ಠ ಸುರಕ್ಷತೆಗೆ ಜಿಲ್ಲಾಡಳಿತದ ಮೂಲಕ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿಯು ಪ್ರವಾಸೋದ್ಯಮ, ಪೊಲೀಸ್, ಕಂದಾಯ ಮತ್ತು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳದ್ದಾಗಿದೆ ಎಂದರು.
ಈ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರ ಮತ್ತು ಸಮನ್ವಯದಿಂದ ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯಿಂದ ಸುರಕ್ಷಿತವಾಗಿ ತೆರಳುವಂತಾಗಬೇಕು, ಇದರಲ್ಲಿ ಯಾವುದೇ ಲೋಪಗಳಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


