ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಅವರ ಶುಕ್ರವಾರದ ತುಮಕೂರು ಪ್ರವಾಸ ರದ್ದಾಗಿದೆ.
ಮಾಜಿ ಸಚಿವ ಕೆ.ಎನ್.ರಾಜಣ್ಣ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ಸಿದ್ದರಾಮಯ್ಯ ಇನ್ನೂ ವಿಧಾನಸೌಧದಲ್ಲಿಯೇ ಇದ್ದು, ತುಮಕೂರು ಕಾರ್ಯಕ್ರಮಗಳು ರದ್ದಾಗಿದೆ.
ವಿವಿಧ ಕಾರ್ಯಕ್ರಮಗಳು: ಸಿಎಂ ಸಿದ್ದರಾಮಯ್ಯ ಶುಕ್ರವಾರ ತುಮಕೂರು ಜಿಲ್ಲೆಗೆ ಭೇಟಿ ನೀಡಬೇಕಿತ್ತು. ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ 300 ಹಾಸಿಗೆಯ ಸಾಮರ್ಥ್ಯದ ನೂತನ ಆಸ್ಪತ್ರೆ ಕಟ್ಟಡದ ಶಂಕು ಸ್ಥಾಪನೆ ಮಾಡಬೇಕಿತ್ತು.
ವಸಂತ ನರಸಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ tertiary treatment plant(TTP) ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಜಿಲ್ಲಾಡಳಿತ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ತಯಾರಿ ನಡೆಸಿತ್ತು.
ಈ ಸರ್ಕಾರಿ ಕಾರ್ಯಕ್ರಮಗಳ ಬಳಿಕ ಸಿದ್ದರಾಮಯ್ಯ ಮಾಜಿ ಸಚಿವ ಕೆ.ಎನ್.ರಾಜಣ್ಣ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳಬೇಕಿತ್ತು. ರಾಜಣ್ಣ ನಿವಾಸದ ಆವರಣದಲ್ಲಿ ಪೆಂಡಾಲ್ ಹಾಕಿ ಭೋಜನ ಕೂಟಕ್ಕೆ ತಯಾರಿ ನಡೆಸಲಾಗಿತ್ತು. ಈ ಭೋಜನ ಕೂಟ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು.
ಅದರಲ್ಲೂ ಸಹಕಾರ ಸಚಿವರಾಗಿದ್ದ ಸಿದ್ದರಾಮಯ್ಯ ಆಪ್ತ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ ಮೇಲೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟಕ್ಕೆ ಸಿದ್ದರಾಮಯ್ಯ, ವಿವಿಧ ಸಚಿವರು ಆಗಮಿಸುವುದು ಚರ್ಚೆ ಹುಟ್ಟು ಹಾಕಿತ್ತು.
ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯಗೆ ಅತಿಥ್ಯವನ್ನು ನೀಡಲು ಕೆ.ಎನ್.ರಾಜಣ್ಣ ತಯಾರಾಗಿದ್ದರು. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆ.ಎನ್.ರಾಜಣ್ಣ ನಿವಾಸದ ಭೋಜನ ಕೂಟದಲ್ಲಿ ರಾಜಕೀಯ ಚರ್ಚೆ ನಡೆಯಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.
ಆದರೆ ಶುಕ್ರವಾರ ಬೆಳಗ್ಗೆಯಿಂದ ಸಿದ್ದರಾಮಯ್ಯ ವಿಧಾನಸೌಧದಲ್ಲಿಯೇ ಇದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ವಿಧಾನಸೌಧದ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯನ್ನು ನಡೆಸಿದರು.
ಆದರೆ ಸಭೆಯಲ್ಲಿ ಕಾರ್ಖಾನೆ ಮಾಲೀಕರ ಸರ್ಕಾರದ ತೀರ್ಮಾನಕ್ಕೆ ಒಪ್ಪಿಲ್ಲ. ಮಾಲೀಕರು ಪ್ರತ್ಯೇಕ ಸಭೆ ನಡೆಸುತ್ತಿದ್ದು, ಸಿದ್ದರಾಮಯ್ಯ ಕಬ್ಬು ಬೆಳೆಗಾರ ರೈತರ ನಿಯೋಗದ ಜೊತೆ ಸಭೆಯನ್ನು ಮಾಡುತ್ತಿದ್ದಾರೆ. ಸರಣಿ ಸಭೆ ಹಿನ್ನಲೆಯಲ್ಲಿ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದಾಗಿದೆ.
ವಿಧಾನಸೌಧದ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯ ನಂತರ ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯ ತುಮಕೂರಿಗೆ ಪ್ರಯಾಣ ಬೆಳೆಸಬೇಕಿತ್ತು. ಮಧ್ಯಾಹ್ನ 2 ರಿಂದ 2.30ರ ತನಕ ಕ್ಯಾತ್ಸಂದ್ರದಲ್ಲಿರುವ ಕೆ.ಎನ್.ರಾಜಣ್ಣ ನಿವಾಸದಲ್ಲಿ ಭೋಜನ ಕೂಟದಲ್ಲಿ ಪಾಲ್ಗೊಳ್ಳಬೇಕಿತ್ತು.
ಈ ಭೋಜನಕೂಟದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ, ಹೆಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್ ಮತ್ತು ಎಂ.ಸಿ.ಸುಧಾಕರ್ ಮತ್ತು ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರೂ ಪಾಲ್ಗೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿತ್ತು.
ಆದರೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ನಡೆಯುತ್ತಿರುವ ಸಭೆ ಅಂತಿಮವಾಗಿಲ್ಲ. ಅತ್ತ ಬೆಳಗಾವಿಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದುಗೊಳಿಸಿ ವಿಧಾನಸೌಧದಲ್ಲಿಯೇ ಇದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


