ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ ಭೇಟಿಯ ಹಿನ್ನೆಲೆಯಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಬೀಸುತ್ತ ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಚ್ಚೆತ್ತ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಕೆ ಎಂ ಅನಿಲ್ ಕುಮಾರ್, ಬಿ ಆನಂದ್, ಮಹದೇವು, ಕರಿಯಪ್ಪ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.
ಈ ವೇಳೆ ಪೊಲೀಸರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ದಸಂಸ ಮುಖಂಡರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರವಾಗಿ ವಂಚಿಸುತ್ತಾ ಬಂದಿದ್ದಾರೆ. ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ, ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ, ನುಡಿದಂತೆ ನಡೆಯಲಿಲ್ಲ ಏಕೆ ಎಂದು ಪ್ರಶ್ನಿಸಿದರು.
ಶೋಷಿತ ತಳ ಸಮುದಾಯಗಳ ಹೆಸರಲ್ಲಿ ಅಧಿಕಾರಕ್ಕೇರಲು ತಾತ್ಕಾಲಿಕ ಪರಿಹಾರಗಳಾಗಿ ಐದು ಗ್ಯಾರಂಟಿಗಳನ್ನು ನೀಡಿದರೇ ಹೊರತು ತಳ ಸಮುದಾಯಗಳಿಗೆ ಭೂಮಿ, ಮನೆ, ಉದ್ಯೋಗ, ಶಿಕ್ಷಣ, ಕಂಪನಿ ಸ್ಥಾಪನೆಯಂತಹ ಅವಕಾಶಗಳನ್ನು ನೀಡಿ ಅಮೂಲಾಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


