ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವರು ಈಗಾಗಲೇ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಧಾರವಾಡ (ಗ್ರಾಮೀಣ) ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಈ ಕುರಿತು ಆದೇಶ ನೀಡಿದ್ದಾರೆ.
ವಿನಯ್ ಕುಲಕರ್ಣಿ ಈ ವರ್ಷದ ಜೂನ್‌ನಲ್ಲಿ ಸುಪ್ರೀಂಕೋರ್ಟ್ ತಮ್ಮ ಜಾಮೀನನ್ನು ರದ್ದುಗೊಳಿಸಿದ ಬಳಿಕ ಪೊಲೀಸರ ಮುಂದೆ ಶರಣಾಗಿದ್ದರು. ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣ 15ನೇ ಆರೋಪಿ.
ಸೋಮವಾರ ಕೋರ್ಟ್ 16ನೇ ಆರೋಪಿ ಚಂದ್ರಶೇಖರ ಇಂಡಿಗೆ ಜಾಮೀನು ಮಂಜೂರು ಮಾಡಿದ್ದು,ವಿನಯ್ ಕುಲಕರ್ಣಿ ಅರ್ಜಿ ತಿರಸ್ಕಾರ ಮಾಡಿದೆ. ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಪ್ರಭಾವಿಯಾಗಿದ್ದು, ಹತ್ಯೆ ಪ್ರಕರಣದ ಸಾಕ್ಷ್ಯಗಳ ಮೇಲೆ ಒತ್ತಡ ಹಾಕಿದ ಕಾರಣ ನೀಡಿ ಜಾಮೀನು ಅರ್ಜಿ ತಿರಸ್ಕಾರ ಮಾಡಲಾಗಿದೆ.
ಸಿಬಿಐ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಿದೆ. ಈಗಾಗಲೇ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡಿದೆ. ಆದ್ದರಿಂದ ಜಾಮೀನು ನೀಡಬೇಕು ಎಂದು ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.
2016ರಲ್ಲಿ ನಡೆದ ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿತ್ತು.
ಕರ್ನಾಟಕ ಹೈಕೋರ್ಟ್ ಸಿಬಿಐ ಈ ಆರೋಪವನ್ನು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಪ್ರಭಾವಿಯಾದ ಆರೋಪಿಯ ಜಾಮೀನು ರದ್ದುಗೊಳಿಸಬೇಕು ಎಂದು ಮನವಿ ಮಾಡಿತ್ತು. ಅರ್ಜಿ ಪುರಸ್ಕಾರ ಮಾಡಿದ್ದ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿ, ಅವರು ಪೊಲೀಸರ ಮುಂದೆ ಶರಣಾಗಬೇಕು ಎಂದು ಆದೇಶಿಸಿತ್ತು.
ಜೂನ್ 15, 2026ರಲ್ಲಿ ಜಿಮ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ವಿನಯ್ ಕುಲಕರ್ಣಿ ಸಚಿವರಾಗಿದ್ದ ಕಾರಣ ರಾಜ್ಯ ರಾಜಕೀಯದಲ್ಲಿ ಈ ಪ್ರಕರಣ ಭಾರೀ ಕೋಲಾಹಲ ಉಂಟು ಮಾಡಿತ್ತು.
ಕಾಂಗ್ರೆಸ್ ಪಕ್ಷಕ್ಕೆ ಯೋಗೇಶ್ ಗೌಡ ಹತ್ಯೆ ಪ್ರಕರಣ ಮುಜುಗರ ಉಂಟು ಮಾಡಿತ್ತು. ಯೋಗೇಶ್ ಗೌಡ ಕುಟುಂಬದವರು ಪ್ರಕರಣದ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು. 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ಬಂಧಿತರಾದ ವಿನಯ್ ಕುಲಕರ್ಣಿ ಕೆಲವು ಕಾಲ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದರು. ಬಳಿಕ ಅವರಿಗೆ ಜಾಮೀನು ಸಿಕ್ಕಿತ್ತು. ಆದರೆ ಧಾರವಾಡಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು, ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದರು.
ಕರ್ನಾಟಕ ಕಾಂಗ್ರೆಸ್‌ನ ಇಬ್ಬರು ಹಾಲಿ ಶಾಸಕರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಚಿತ್ರದುರ್ಗ ಕ್ಷೇತ್ರದ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಬೆಟ್ಟಿಂಗ್ ಹಗರಣದಲ್ಲಿ ಬಂಧಿಸಿದೆ. ಶಾಸಕ ವಿನಯ್ ಕುಲಕರ್ಣಿ ಸಹ ಇದೇ ಜೈಲಿನಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಶಾಸಕರನ್ನು ಜೈಲಿನಲ್ಲಿ ಭೇಟಿಯಾಗಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


