ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ -2 ನಿನ್ನೆ ( ಮೇ 8 ) ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಏಪ್ರಿಲ್ 24ರಿಂದ ನಿನ್ನೆಯವರೆಗೆ ದ್ವಿತೀಯ ಪಿಯು ಪರೀಕ್ಷೆ-2 ಅನ್ನು ನಡೆಸಿದೆ.
ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು, ತಮ್ಮ ಫಲಿತಾಂಶವನ್ನು ಇನ್ನಷ್ಟು ಉತ್ತಮ ಪಡಿಸಿಕೊಳ್ಳಬೇಕೆಂಬ ಅಪೇಕ್ಷೆ ಉಳ್ಳವರು ಹಾಗೂ ಖಾಸಗಿಯಾಗಿ ಕೆಲವರು ದ್ವಿತೀಯ ಪಿಯುಸಿ ಪರೀಕ್ಷೆ -2 ಅನ್ನು ತೆಗೆದುಕೊಂಡಿದ್ದರು.
ರಾಜ್ಯದಲ್ಲಿ ಒಟ್ಟು 2.71 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಕ್ಕೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 73 ಸಾವಿರ ವಿದ್ಯಾರ್ಥಿಗಳು ಮೊದಲ ಪರೀಕ್ಷೆ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದರು.
ಏ.24ರಂದು ಕನ್ನಡ, ಅರೇಬಿಕ ಭಾಷಾ ವಿಷಯಗಳ ಪರೀಕ್ಷೆ ನಡೆದಿತ್ತು. ಏ.25ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಏ.26ರಂದು ಇತಿಹಾಸ, ಭೌತಶಾಸ್ತ್ರ, ಏ.28ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಏ. 29 ರಂದು ಇಂಗ್ಲಿಷ್, ಮೇ 2ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಮೇ 3ರಂದು ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗಣಕ ವಿಜ್ಞಾನ, ಏ.5ರಂದು ಅರ್ಥಶಾಸ್ತ್ರ, ಮೇ 6ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 7ರಂದು ಹಿಂದಿ ಪರೀಕ್ಷೆಗಳು ನಡೆದಿದ್ದವು.
ನಿನ್ನೆ ಬೆಳಿಗ್ಗೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಫ್ರೆಂಚ್ ಹಾಗೂ ಮಧ್ಯಾಹ್ನ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್ ಮತ್ತು ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಈ ಪರೀಕ್ಷೆ ಫಲಿತಾಂಶದ ನಂತರ ಮಂಡಲಿಯು ಮೂರನೇ ಪರೀಕ್ಷೆಯನ್ನು ನಡೆಸಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ -2ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶೀಘ್ರದಲ್ಲೇ ಮುಗಿಯಲಿದ್ದು, 8-10 ದಿನದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


