ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆಪ್ಟೆಂಬರ್ 11ರಂದು (ಗುರುವಾರ) ಶಾಸಕ ಯತ್ನಾಳ್ ಮತ್ತು ಎಂಎಲ್‌ಸಿ ಸಿ.ಟಿ. ರವಿ ಅವರು ಮದ್ದೂರಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಭಾಷಣದ ವೇಳೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) ಸೆಕ್ಷನ್ 196(1)(ಇ), 299, 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯ ಬಿಜೆಪಿಯ ‘ಹೊಂದಾಣಿಕೆ ರಾಜಕಾರಣ’ವನ್ನು ಕೈಬಿಟ್ಟು, ತಮ್ಮನ್ನು ಗೌರವದಿಂದ ಪಕ್ಷಕ್ಕೆ ಮರಳಿ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ, ತಾವೇ “ಹೊಸ ಹಿಂದೂ ಪಕ್ಷ” ಸ್ಥಾಪಿಸುವುದಾಗಿ ಘೋಷಿಸಿದರು. ಈ ಬಗ್ಗೆ ಹಿರಿಯ ನಾಯಕ ಪ್ರತಾಪ್ ಸಿಂಹ ಅವರ ಜೊತೆ ಸೇರಿ ಹೊಸ ಪಕ್ಷ ರಚಿಸುವುದಾಗಿ ಹೇಳಿಕೆ ನೀಡಿದರು. ಈ ಬೆಳವಣಿಗೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


