ನವದೆಹಲಿ: ಮಹಾರಾಷ್ಟ್ರದ ಮಾಜಿ ರಾಜ್ಯಪಾಲರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಆದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಭಾರತದ ನೂತನ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ವೇದಿಕೆಯನ್ನು ಹಂಚಿಕೊಂಡರು. ಜಗದೀಪ್ ಧನಕರ್ ರಾಜೀನಾಮೆಯ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಹಲವರ ಅಚ್ಚರಿಗೆ ಕಾರಣವಾಯಿತು.
ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಹಾಗೂ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಸಿ.ಪಿ. ರಾಧಾಕೃಷ್ಣನ್, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ವಿರುದ್ಧ ಭರ್ಜರಿ ಜಯ ಸಾಧಿಸಿದ್ದರು. ಒಟ್ಟು 752 ಮತಗಳ ಪೈಕಿ 452 ಮತಗಳನ್ನು ಪಡೆದು 152 ಮತಗಳ ಅಂತರದಲ್ಲಿ ಅವರು ಗೆಲುವು ಸಾಧಿಸಿದ್ದರು. ಅವರ ಈ ಗೆಲುವು ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಬಲ ನೀಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


