ದಾವಣಗೆರೆ ಧಣಿ ಎಂದೇ ಖ್ಯಾತಿ ಪಡೆದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರವನ್ನು ತಡರಾತ್ರಿ ಬೆಂಗಳೂರು ನಗರದಿಂದ ದಾವಣಗೆರೆಗೆ ತರಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ 94 ವರ್ಷದ ಶಾಮನೂರು ಶಿವಶಂಕರಪ್ಪ ಸಾವನ್ನಪ್ಪಿದ್ದರು. ಪಾರ್ಥಿವ ಶರೀರವನ್ನು ದಾವಣಗೆರೆ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 10.30ರ ತನಕ ಪೂಜೆ ಹಾಗೂ ಕುಟುಂಬಸ್ಥರ ದರ್ಶನಕ್ಕಾಗಿ ಇಡಲಾಗುತ್ತದೆ.
ಸಾರ್ವಜನಿಕರಿಗೆ ಅಂತಿಮದರ್ಶನ: ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಾಧ್ಯಾಹ್ನ12 ಗಂಟೆಯಿಂದ 3 ಗಂಟೆವರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ವಿಧಿವಿಧಾನ ಸಂಜೆ 4.30ರ ಬಳಿಕ ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಲಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಪಾರ್ಥಿವ ಶರೀರದ ಮೆರವಣಿಗೆ ಮಾರ್ಗ

ಡಾ.ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಆದ್ದರಿಂದ ಸಾವಿರಾರು ಜನರು, ವಿವಿಧ ಪಕ್ಷದ ನಾಯಕರು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಆದ್ದರಿಂದ ಸಾರ್ವಜನಿಕರಿಗೆ ಮತ್ತು ಗಣ್ಯರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಿ ಅಂತಿಮ ದರ್ಶನಕ್ಕೆ ದಾವಣಗೆರೆ ಪೊಲೀಸರು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಸಂತಾಪ ಸೂಚನೆ ನಿರ್ಣಯ ಮಂಡಿಸಿ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ’ ಎಂದು ಹೇಳಿದ್ದಾರೆ.
‘ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.
ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದೆ. ಈ ಹೋರಾಟದಲ್ಲಿ ಪಾಲ್ಗೊಳ್ಳಲು ಅನೇಕ ಸಚಿವರು, ಶಾಸಕರು ದೆಹಲಿಯಲ್ಲಿದ್ದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನಲೆಯಲ್ಲಿ ದಾವಣಗೆರೆಯ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ‘ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ಪೋಸ್ಟ್ ಹಾಕಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


