ಲೋಕಾಯುಕ್ತರನ್ನು ಕಂಡು ಮನೆಯಲ್ಲಿದ್ದ ಹಣವನ್ನು ಸರ್ಕಾರಿ ಅಧಿಕಾರಿ ಕಮೋಡ್‌ಗೆ ಹಾಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರು ಮಂಗಳವಾರ ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ವಿವಿಧ ಕಡೆ ದಾಳಿಯನ್ನು ಮಾಡಿದ್ದಾರೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಅಧಿಕಾರಿಗಳು ಮನೆಗೆ ಬಂದಾಗ ಸುಮಾರು ಅರ್ಧ ಗಂಟೆಗಳ ಕಾಲ ಮನೆಯ ಬಾಗಿಲನ್ನು ತೆರೆಯದೇ ರಾಜಶೇಖರ್ ಕಾಯಿಸಿದ್ದಾರೆ.
ರಾಜಶೇಖರ್ ಅವರಿಗೆ ಸೇರಿದ ಒಟ್ಟು ಮೂರು ಕಡೆಗಳಲ್ಲಿ ಒಟ್ಟಿಗೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿಯನ್ನು ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಕಮೋಡ್‌ಗೆ ಹಣ ಹಾಕಿದ ಅಧಿಕಾರಿ: ಲೋಕಾಯುಕ್ತ ಪೊಲೀಸರನ್ನು ಕಂಡು ಗಾಬರಿಯಾದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಹಾಕಿ ಫ್ಲಶ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರು ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಯೇ? ಎಂಬುದು ತಿಳಿಯಬೇಕಿದೆ.
ಲೋಕಾಯುಕ್ತರು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಕಾರಿ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರು ನಗರದಲ್ಲಿ ಏಕ ಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರಿನ ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲೂ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಅಕ್ರಮ ಆಸ್ತಿಗಳಿಕೆ ದೂರಿನದ ಮೇಲೆ ದಾಳಿಯನ್ನು ಮಾಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


