ಬಳ್ಳಾರಿ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ನವೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಈ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಶಿಸ್ತುಬದ್ಧವಾಗಿ ಆಯೋಜಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನವೆಂಬರ್ 4 ರಿಂದ 11ರ ವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ. ಜಿಲ್ಲಾಧಿಕಾರಿಗಳು ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯನ್ನು ಸಹ ನಡೆಸಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿಗಳು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಆಯೋಜಿಸಬೇಕು ಎಂದು ವಿವಿಧ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದ್ದು, ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.
ಈ ನೇಮಕಾತಿ ರ‍್ಯಾಲಿಗಾಗಿಯೇ ಅಧಿಕಾರಿಗಳನ್ನು ಒಳಗೊಂಡ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.
ಸೇನಾ ನೇಮಕಾತಿಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿರುವ ವಿಶೇಷ ರ‍್ಯಾಲಿ ಇದಾಗಿದೆ. ಜಿಲ್ಲೆಯ ವಿದ್ಯಾರ್ಥಿ, ಯುವಜನರಿಗೆ ಸ್ಪೂರ್ತಿ ಸಿಗುವ ಹಾಗೆ ರ‍್ಯಾಲಿಯು ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳ ಸಹಕಾರ ಬೇಕಾಗಿದೆ. ಹಾಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹೆಚ್ಚು ಸಮನ್ವಯದಿಂದ ಕಾರ್ಯನಿರ್ವಹಣೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ರ‍್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ಭಾಗವಹಿಸುವ ನಿರೀಕ್ಷೆ ಇದ್ದು, ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡಲು ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಎಸ್‌ಒಪಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ರ‍್ಯಾಲಿಯಲ್ಲಿ ಮುಖ್ಯವಾಗಿ ವಸತಿ, ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದರು. ವೇದಿಕೆ, ಆಸನ ವ್ಯವಸ್ಥೆ, ವಿದ್ಯುತ್ ದೀಪಗಳ ವ್ಯವಸ್ಥೆ, ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಜನರೇಟರ್ ವ್ಯವಸ್ಥೆ ಆಗಬೇಕು.
ಕುರ್ಚಿಗಳು, ಟೇಬಲ್‌ಗಳು, ಮೈಕ್‌ಸೆಟ್ ಮತ್ತು ಹಾಸಿಗೆ ಹಾಗೂ ತ್ಯಾಜ್ಯದ ತೊಟ್ಟಿಗಳ ವ್ಯವಸ್ಥೆ ಮಾಡಬೇಕಿದೆ. ಬಿಎಸ್‌ಎನ್‌ಎಲ್ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಜೊತೆಗೆ ವೈಫೈ ಮತ್ತು ಟೆಲಿಫೋನ್, ಎಲ್‌ಎಎನ್ ಸಂಪರ್ಕ, ಫೈಬರ್ ಕೇಬಲ್ ಜೊತೆಗೆ ಟೆಕ್ನಿಕಲ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟ ಉಪಹಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆಯು ಶಿಸ್ತುಬದ್ಧವಾಗಿ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಸಮಿತಿ ಪಾರದರ್ಶಕವಾಗಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ನೇಮಕಾತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಬಹುದು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


