ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದೆ. ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಗುರುವಾರ ಅಸ್ತಿತ್ವಕ್ಕೆ ಬರಲಿದ್ದು, ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮ 11 ಗಂಟೆಗೆ ನಿಗದಿಯಾಗಿದೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 89, ಜೆಡಿಯು 85, ಎಲ್‌ಜೆಪಿ (ಆರ್‌ವಿ) 19, ಹೆಚ್‌ಎಎಂ(ಎಸ್) 5 ಮತ್ತು ಆರ್‌ಎಲ್‌ಎಂ 4 ಸೀಟುಗಳಲ್ಲಿ ಜಯಗಳಿಸಿವೆ. ಎನ್‌ಡಿಎ ಮೈತ್ರಿಕೂಟ 202 ಸ್ಥಾನಗಳಲ್ಲಿ ಜಯಗಳಿಸಿದ್ದು, ನೂತನ ಸರ್ಕಾರವನ್ನು ರಚನೆ ಮಾಡಲಿದೆ.
ಹಾಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ (ಇಂದು) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಸರ್ಕಾರವನ್ನು ವಿಸರ್ಜನೆ ಮಾಡಲಾಗುತ್ತದೆ. ಹೊಸ ಸರ್ಕಾರ ಗುರುವಾರ ರಚನೆಯಾಗಲಿದ್ದು, ನಿತೀಶ್ ಕುಮಾರ್ 10ನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆ: ಬುಧವಾರ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ಪ್ರತ್ಯೇಕ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿವೆ. ಬಳಿಕ ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳ ಸಭೆ ನಡೆಯಲಿದೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಾಗಿ ಉತ್ತರ ಪ್ರದೇಶದ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಕೇಂದ್ರದ ವೀಕ್ಷಕರಾಗಿ ನೇಮಕ ಮಾಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಾಲ್ ಮತ್ತು ಮಾಜಿ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಸಹ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿಯೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.
ಬಿಜೆಪಿ, ಜೆಡಿಯು ಶಾಸಕಾಂಗ ಪಕ್ಷದ ಸಭೆ ಬಳಿಕ ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ರಾಜಭವನಕ್ಕೆ ಭೇಟಿ ನೀಡಿ ಹೊಸ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ಆಗ ಹಾಲಿ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಹಾರ ವಿಧಾನಸಭೆ ವಿಸರ್ಜನೆ ಮಾಡಲು ಮನವಿ ಸಲ್ಲಿಕೆ ಮಾಡಲಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ನಿಗದಿಯಾಗಿದೆ. ಎನ್‌ಡಿಎ ನಾಯಕರು ರಾಜಭವನದಿಂದ ಗಾಂಧಿ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕ್ರಮದ ತಯಾರಿಯನ್ನು ವೀಕ್ಷಣೆ ಮಾಡಲಿದ್ದಾರೆ.
ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ 10ನೇ ಬಾರಿಗೆ ಬಿಹಾರ ರಾಜ್ಯದ ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬಿಜೆಪಿ ಮತ್ತು ಎಲ್‌ಜೆಪಿ (ಆರ್‌ವಿ) ಪಕ್ಷದ ಇಬ್ಬರು ನಾಯಕರು ಡಿಸಿಎಂ ಆಗಿ ಸಂಪುಟ ಸೇರಲಿದ್ದಾರೆ.
ಎಷ್ಟು ಸಚಿವರು ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ? ಎಂಬುದು ಇನ್ನೂ ಸಹ ಅಂತಿಮಗೊಂಡಿಲ್ಲ. 243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಸೀಟು ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ 85 ಸೀಟು ಗೆದ್ದಿರುವ ಜೆಡಿಯುಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುತ್ತಿದೆ.
ಜೆಡಿಯು ಈಗಾಗಲೇ ನಿತೀಶ್ ಕುಮಾರ್ ಅವರೇ ನಮ್ಮ ಸಿಎಂ ಅಭ್ಯರ್ಥಿ ಎಂದು ಹೇಳಿದೆ. ಆದ್ದರಿಂದ ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ನಿತೀಶ್ ಕುಮಾರ್ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಮತ್ತು ಎನ್‌ಡಿಎ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಿಗೆ ಸಹ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನವನ್ನು ನೀಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


