ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದು, ರಾಜ್ಯದ ಸುಮಾರು 25 ಕಡೆಗಳಲ್ಲಿ ದಾಳಿ ಮಾಡಿ ಚುರುಕು ಮುಟ್ಟಿಸಿದ್ದಾರೆ.
ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ವೇಳೆ ಅವರಿಗೆ ಹಲವು ಮಹತ್ವದ ದಾಖಲೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ.
ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲೆ ಮೂಲೆಗಳನ್ನು ಬಿಡದ ಅಧಿಕಾರಿಗಳು ಸಂಜೆಯವರೆಗೂ ಶೋಧ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಈ ನಾಲ್ವರು ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯವರೆಗೂ ದಾಳಿ ಮುಂದುವರಿಯುವ ಸಾಧ್ಯತೆಯಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


