NPS ಅಥವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಮರು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಸರ್ಕಾರದ ಮೇಲೆ ಒತ್ತಡವನ್ನು ಹಾಕಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಫರ್ವೇಜ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿತ್ತು.
ಅಂಜುಮ್ ಫರ್ವೇಜ್ ಅವರು ಈಗಾಗಲೇ ವರದಿ ಸಿದ್ದಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘದವರನ್ನು ಸಭೆಗೆ ಆಹ್ವಾನಿಸುತ್ತೇವೆ ಎಂದು ತಿಳಿಸಿದ್ದರು. ಈ ಸಭೆ ಸೋಮವಾರ ಮಧ್ಯಾಹ್ನ ನಿಗದಿಯಾಗಿದೆ.
ಸಭಾ ಸೂಚನಾ ಪತ್ರ: ಸೋಮವಾರ ಮಧ್ಯಾಹ್ನ 4 ಗಂಟೆಗೆ ನಡೆಯುವ ಸಭೆಯ ಕುರಿತು ಅರುಲ್ ಕುಮಾರ್, ಸರ್ಕಾರದ ಉಪ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಆಡಳಿತ&ಸಮನ್ವಯ) ಸಭಾ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ದಿನಾಂಕ: 22.12.2025ರಂದು ಅಪರಾಹ್ನ 4.00 ಗಂಟೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ಕೊಠಡಿ ಸಂಖ್ಯೆ: 306, 3ನೇ ಮಹಡಿ, ವಿಧಾನಸೌಧ ಇಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನು ಏರ್ಪಡಿಸಲಾಗಿದ್ದು, ಸದರಿ ಸಭೆಗೆ ಹಾಜರಾಗುವಂತೆ ಕೋರಿದೆ ಎಂದು ತಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷ ತನ್ನ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸುತ್ತೇವೆ ಎಂದು ರಾಜ್ಯದ ಸರ್ಕಾರಿ ನೌಕರರಿಗೆ ಭರವಸೆ ನೀಡಿತ್ತು. ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪಿಎಸ್ ಮರು ಜಾರಿ ಭರವಸೆ ನೀಡಿದ್ದರು.
ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದ್ದು, ಈಗ ಸರ್ಕಾರಿ ನೌಕರರು ಬೇಡಿಕೆಯ ಕುರಿತು ಸರ್ಕಾರದ ಮೇಲೆ ಒತ್ತಡವನ್ನು ಹಾಕುತ್ತಿದ್ದಾರೆ. ಕರ್ನಾಟಕ ಸರ್ಕಾರ ಈ ಬೇಡಿಕೆಯ ಭಾಗವಾಗಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿಯನ್ನು ರಚನೆ ಮಾಡಿತ್ತು.
ಈ ಸಮಿತಿ ತನ್ನ ಅಧ್ಯಯನವನ್ನು ಪೂರ್ಣಗೊಳಿಸಿ ವರದಿ ತಯಾರು ಮಾಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜೊತೆ ಚರ್ಚಿಸಿದ ಬಳಿಕ ಸರ್ಕಾರಕ್ಕೆ ಸಮಿತಿ ವರದಿಯನ್ನು ಸಲ್ಲಿಕೆ ಮಾಡಲಿದೆ. ಆದರೆ ಯಾವ ದಿನಾಂಕಕ್ಕೆ ವರದಿ ಸಲ್ಲಿಕೆ ಮಾಡಲಾಗುತ್ತದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
ಸದ್ಯದ ಮಾಹಿತಿ ಪ್ರಕಾರ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದರೂ ಸಹ ತಕ್ಷಣಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ. ಒಪಿಎಸ್ ಮರು ಜಾರಿ ಮಾಡಿದರೆ ಆಗುವ ಆರ್ಥಿಕ ಪರಿಣಾಮಗಳ ಕುರಿತು ಪರಾಮರ್ಶೆಯನ್ನು ನಡೆಸಿ, 2026-27ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಘೋಷಣೆಯನ್ನು ಮಾಡುವ ನಿರೀಕ್ಷೆ ಇದೆ.
ಹಲವು ರಾಜ್ಯಗಳಲ್ಲಿ ಈಗಾಗಲೇ ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮಾರು ಜಾರಿ ಮಾಡಲಾಗಿದೆ. ಆದರೆ ಹೀಗೆ ಜಾರಿ ಮಾಡಿದಾಗ ಕೇಂದ್ರಕ್ಕೆ ಹೋಗಿರುವ ಹಣ ವಾಪಸ್ ಬರುವುದು ಸೇರಿದಂತೆ ಹಲವಾರು ತಾಂತ್ರಿಕ ಸಮಸ್ಯೆಗಳಿವೆ. ಇವುಗಳನ್ನು ರಾಜ್ಯ ಸರ್ಕಾರ ಅಧ್ಯಯನ ಮಾಡಿ, ಆರ್ಥಿಕವಾಗಿ ಯಾವುದೇ ಹೊರೆಯಾಗದಂತೆ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರು ಜಾರಿ ಬೇಡಿಕೆಯನ್ನು ಜಾರಿಗೊಳಿಸಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


