ಬೆಂಗಳೂರು: ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ಕ್ಕೆ ದಿಕ್ಸೂಚಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿನ ಉಪಚುನಾವಣಾ ಫಲಿತಾಂಶದ ಮೂಲಕ 2028ರ ವಿಧಾನಸಭಾ ಚುನಾವಣೆಗೆ ಜನರು ಜನರು ಮುನ್ನುಡಿ ಬರೆದಿದ್ದಾರೆ. ಸುಳ್ಳೇ ಕಾಂಗ್ರೆಸ್ ಮನೆ ದೇವರು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕಿಸಿದ್ದರು. ಅದಕ್ಕೆ ಈ ಉಪಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಕಿಡಿಕಾರಿದರು.
ನಾನು ಈ ಮೊದಲೇ ಹೇಳಿದಂತೆ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ. ಕಾಂಗ್ರೆಸ್ ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದಲಾಗಿ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ. ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮನ್ನಣೆ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ತುಂಬಾ ಅಪಪ್ರಚಾರ ಮಾಡಿದವು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು. ಆದರೆ ಚುನಾವಣೆ ಫಲಿತಾಂಶ ಬಂದ ಕೂಡಲೇ ಹಣದ ಹೊಳೆ ಹರಿಸಿದ್ದಾರೆಂದು ಹೇಳುತ್ತಾರೆ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಗ್ಯಾರಂಟಿ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿಗಳನ್ನು ನೋಡಿ ಮೂರು ಕ್ಷೇತ್ರಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಿ ಗೆಲ್ಲಿಸಿದ್ದಾರೆ. ಚುನಾವಣೆಗಳಲ್ಲಿ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆ ಸಂಜೆಯೇ ಹೇಳಿದ್ದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾದರೂ ನಮಗೆ ಗೆಲುವು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


