ವಿರಾಟ್ ಕೊಹ್ಲಿ ಬುಧವಾರ ಆಡಲಿರುವ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಶಿಫ್ಟ್ ಆಗಿದೆ. ಕೊಹ್ಲಿ ಬ್ಯಾಟಿಂಗ್ ನೋಡಲು ಕಾಯುತ್ತಿದ್ದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆಯಾಗಿದೆ.
ಬೆಂಗಳೂರು ನಗರ ಪೊಲೀಸರು ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯನ್ನು ಬುಧವಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಅನುಮತಿ ನೀಡಿಲ್ಲ. ದೆಹಲಿ-ಕರ್ನಾಟಕ ನಡುವಿನ ಪಂದ್ಯ ನಾಳೆ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು.
ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿ ಆಡುತ್ತಿದ್ದರು. ಬೆಂಗಳೂರು ನಗರದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ನಿರಾಸೆ ಉಂಟಾಗಿದೆ. ಕೆಎಸ್‌ಸಿಎ ಎಲ್ಲಿ ಪಂದ್ಯ ನಡೆಸಲಾಗುತ್ತದೆ? ಎಂದು ಶೀಘ್ರವೇ ಘೋಷಣೆ ಮಾಡಲಿದೆ.
ವಿರಾಟ್ ಕೊಹ್ಲಿ ಸೇರಿದಂತೆ ವಿವಿಧ ಆಟಗಾರರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿಗಾಗಿ ಅಭ್ಯಾಸ ನಡೆಸುತ್ತಿದ್ದರು. ಆದರೆ ಬೆಂಗಳೂರು ಪೊಲೀಸರು ಪಂದ್ಯ ನಡೆಸಲು ಅನುಮತಿ ನೀಡದ ಕಾರಣ ಪಂದ್ಯ ಬೆಂಗಳೂರು ನಗರದಿಂದ ಸ್ಥಳಾಂತರವಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಳಿಕ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿ ನಡೆದಿಲ್ಲ. ಆದ್ದರಿಂದ ವಿಜಯ್ ಹಜಾರೆ ಟ್ರೋಫಿ ನಡೆಯಲಿದೆ ಎಂದು ಕ್ರಿಕೆಟ್ ಪ್ರೇಮಿಗಳು ಭರವಸೆ ಹೊಂದಿದ್ದರು.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಳಿಕ ಸರ್ಕಾರ ರಚನೆ ಮಾಡಿದ್ದ ಮೈಕಲ್ ಡಿ. ಕುನ್ಹಾ ಅವರ ಸಮಿತಿಯು ಚಿನ್ನಸ್ವಾಮಿಯಲ್ಲಿ ಮತ್ತೆ ಇಂಥ ಅವಗಢಗಳು ಸಂಭವಿಸದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ 17 ಷರತ್ತುಗಳನ್ನು ವಿಧಿಸಿದೆ.
ಭದ್ರತಾ ನಿಯಮಗಳನ್ನು ಪಾಲನೆ ಮಾಡಿದರೆ ಮಾತ್ರ ಪಂದ್ಯ ನಡೆಸಲು ಅನುಮತಿ ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸರು ಸ್ಪಷ್ಟಪಡಿಸಿದ್ದರು. ಸ್ಟೇಡಿಯಂ ಸುರಕ್ಷತಾ ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಸೋಮವಾರ ಈ ಸಮಿತಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ಪೊಲೀಸ್ ಆಯುಕ್ತರ ಹೇಳಿಕೆ: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅನುಮತಿ ನೀಡಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸೋಮವಾರ ಕೆಎಸ್‌ಸಿಎ ರಾಜ್ಯ ಸರ್ಕಾರಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಸಲ್ಲಿಕೆ ಮಾಡಿತ್ತು. ಇದರಲ್ಲಿ ವಿಜಯ್ ಹಜಾರೆ ಟ್ರೋಫಿ ಮತ್ತು ಮುಂಬರುವ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಮನವಿ ಸಲ್ಲಿಕೆ ಮಾಡಲಾಗಿತ್ತು.
ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಭೇಟಿಯಾಗಿ ಈ ಕುರಿತು ಮನವಿಯನ್ನು ಸಲ್ಲಿಕೆ ಮಾಡಿದ್ದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಕೆಎಸ್‌ಸಿಎ ಪದಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ್ದರು.
ಈ ಸಭೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮುಂತಾದವರು ಪಾಲ್ಗೊಂಡಿದ್ದರು.
ಈಗ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅನುಮತಿ ಸಿಕ್ಕಿಲ್ಲ. ಮುಂದಿನ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಪೊಲೀಸರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


