Monday, August 31, 2026
spot_img
More
    spot_img
    HomeLatest newsಸಚಿವ ಕೆಜೆ ಜಾರ್ಜ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ!

    ಸಚಿವ ಕೆಜೆ ಜಾರ್ಜ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ!

    ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧಿಕಾರ ಹಂಚಿಕೆ ಗೊಂದಲ ಕ್ಲೈಮ್ಯಾಕ್ಸ್‌ಗೆ ತಲುಪಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಗೆ ವಾಪಸ್ ಆಗಲಿದ್ದು, ಎಲ್ಲಾ ಗೊಂದಲ ಬಗೆಹರಿಸುವ ಹೊಣೆಯನ್ನು ಹೈಕಮಾಂಡ್ ನಾಯಕರ ಹೆಗಲಿದೆ ಅವರು ಹೊರಿಸಲಿದ್ದಾರೆ.

    Advertisement

    ಎರಡು ದಿನದಿಂದ ಬೆಂಗಳೂರಿನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,, ವಿವಿಧ ಸಚಿವರು, ಹಲವು ಶಾಸಕರನ್ನು ಭೇಟಿ ಮಾಡಿದ್ದಾರೆ. ಆದರೆ ನಾಯಕತ್ವ ಬದಲಾವಣೆ ವಿಚಾರದಲ್ಲಿ ಅವರು ಯಾವುದೇ ಹೇಳಿಕೆ ನೀಡಿಲ್ಲ.

    ಇಂಧನ ಸಚಿವ ಕೆ.ಜೆ.ಜಾರ್ಜ್ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದರು. ಆ ಬಳಿಕ ಕೆ.ಜೆ.ಜಾರ್ಜ್ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.

    ರಾಹುಲ್ ಆಗಮನಕ್ಕಾಗಿ ನಿರೀಕ್ಷೆ: ವಿದೇಶ ಪ್ರವಾಸದಲ್ಲಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಗೆ ಮರಳಲಿ ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಕರ್ನಾಟಕದ ವಿದ್ಯಮಾನ ಕುರಿತು ಅವರಿಗೆ ವರದಿ ನೀಡಲು ಖರ್ಗೆ ತಯಾರಾಗಿದ್ದಾರೆ. ಮುಂದಿನ ತೀರ್ಮಾನ ರಾಹುಲ್ ಗಾಂಧಿಗೆ ಬಿಟ್ಟಿದ್ದು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರಿಗೆ ಆಪ್ತಾಗಿರುವ ನಾಯಕರಲ್ಲಿ ಸಚಿವ ಕೆ.ಜೆ.ಜಾರ್ಜ್ ಸಹ ಒಬ್ಬರು. ಆದ್ದರಿಂದ ಡಿ.ಕೆ.ಶಿವಕುಮಾರ್ ಜಾರ್ಜ್ ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

    ಸದ್ಯದ ಮಾಹಿತಿ ಪ್ರಕಾರ ಕೆ.ಜೆ.ಜಾರ್ಜ್, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ತಾಳ್ಮೆಯಿಂದ ಕಾಯಿರಿ, ನಿಮ್ಮ ಶಾಸಕರಿಗೂ ಹೇಳಿಕೆಗಳನ್ನು ನೀಡದಂತೆ ಸೂಚನೆ ನೀಡಿ ಎಂದು ಡಿ.ಕೆ.ಶಿವಕುಮಾರ್‌ಗೆ ಸಲಹೆ ನೀಡಿದ್ದಾರೆ.

    ರಾಹುಲ್ ಗಾಂಧಿ ವಾಪಸ್ ಆದ ಬಳಿಕ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯ ತನಕ ಸಮಾಧಾನದಿಂದ ಇರಿ, ನಿಮ್ಮ ಶಾಸಕರ ಮನವೊಲಿಸಿ, ಹೈಕಮಾಂಡ್ ತೀರ್ಮಾನ ಮಾಡುವ ತನಕ ನಾವು ಕಾಯೋಣ ಎಂದು ಜಾರ್ಜ್ ಡಿ.ಕೆ.ಶಿವಕುಮಾರ್ ಬಳಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ.

    ನವೆಂಬರ್ 25ಕ್ಕೆ ರಾಹುಲ್ ಗಾಂಧಿ ದೆಹಲಿಗೆ ಆಗಮಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಬಣದ ಮತ್ತೊಂದು ಶಾಸಕರ ಗುಂಪು ದೆಹಲಿಗೆ ಭೇಟಿ ನೀಡಲು ತಯಾರಿಯನ್ನು ನಡೆಸುತ್ತಿದೆ. ಇತ್ತ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ನವೆಂಬರ್ 26ಕ್ಕೆ ಸಭೆಯನ್ನು ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

    ನವೆಂಬರ್ 20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಆದ್ದರಿಂದ ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆ ಮಾಡಬೇಕು ಎಂಬುದು ಡಿ.ಕೆ.ಶಿವಕುಮಾರ್ ಬಣದ ಒತ್ತಾಯವಾಗಿದೆ. ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

    ನಾಯಕತ್ವ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಪಡೆಯಬೇಕು. ಶಾಸಕಾಂಗ ಪಕ್ಷದ ಸಭೆಯಲ್ಲಿಯೇ ಈ ಕುರಿತು ತೀರ್ಮಾನವಾಗಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಶಾಸಕರ ಬಣದ ಪಟ್ಟು. ಈ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿತುಪ್ಪವಾಗಿದೆ.

    ಕಾಂಗ್ರೆಸ್ ಅಧಿಕಾರದಲ್ಲಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದು. ಪೂರ್ಣ ಬಹುಮತವಿರುವ ರಾಜ್ಯದಲ್ಲಿ ಅಧಿಕಾರ ಹಂಚಿಕೆಗಾಗಿ ನಡೆಯುತ್ತಿರುವ ವಿದ್ಯಮಾನಗಳು ರಾಷ್ಟ್ರಮಟ್ಟದಲ್ಲಿ ಪಕ್ಷದ ಮಜುಗರಕ್ಕೆ ಕಾರಣವಾಗಿದೆ. ಆದ್ದರಿಂದ ಹೈಕಮಾಂಡ್ ಈ ಕುರಿತು ಶೀಘ್ರವೇ ತೀರ್ಮಾನ ಕೈಗೊಳ್ಳಬೇಕಿದೆ.

    ರಾಹುಲ್ ಗಾಂಧಿ ದೆಹಲಿಗೆ ಮರಳಿದ ಬಳಿಕ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ದೆಹಲಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ಪಕ್ಷದಲ್ಲಿನ ಗೊಂದಲ ಬಗೆಹರಿಸಿ ಸ್ಪಷ್ಟವಾದ ತೀರ್ಮಾನ ಪ್ರಕಟಿಸಬೇಕು ಎಂದು ಅವರು ಬೇಡಿಕೆ ಇಡಲಿದ್ದಾರೆ.

    ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ತೀರ್ಮಾನ ಪ್ರಕಟಿಸಬೇಕು ಎಂಬುದು ಬೇಡಿಕೆಯಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading