Tuesday, September 1, 2026
spot_img
More
    spot_img
    HomeBreaking Newsಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ

    ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ

    2012ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ವಿಜಯಪುರದಿಂದ ಕಲಬುರಗಿಗೆ ಹೋಗುವಾಗ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    Advertisement

    ಕಾರಿನಲ್ಲಿ ಐದು ಜನರಿದ್ದರು. ಪೈಕಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (51) ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

    ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಲಬುರಗಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಟುಂಬದ ಸಮೇತ ಹೋಗುವಾಗ ಈ ಘಟನೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. ಸಂಜೆ 5.30ರ ಸುಮಾರಿಗೆ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.

    ಅಪಘಾತ ನಡೆದ ಸ್ಥಳದಲ್ಲಿ ಕಾರಿನಲ್ಲಿದ್ದ ಮಹಾಂತೇಶ್ ಬೀಳಗಿ ಸಹೋದರ ಸಂಬಂಧಿ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಐಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿದ್ದಾರೆ.

    ದಾವಣಗೆರೆ ಜಿಲ್ಲಾಧಿಕಾರಿ, ಬೆಸ್ಕಾಂ ಎಂಡಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದ ಮಹಾಂತೇಶ್ ಬೀಳಗಿ ಮಕ್ಕಳು ಚೆನ್ನಾಗಿ ಓದಬೇಕು. ಸರ್ಕಾರಿ ಸೇವೆಗೆ ಬರಬೇಕು ಎಂದು ಸ್ಪೂರ್ತಿ ತುಂಬುತ್ತಿದ್ದರು. ಅವರ ಭಾಷಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದವು.

    ರಾಮದುರ್ಗ ಮೂಲದ ಮಹಾಂತೇಶ್ ಬೀಳಗಿ ಬಹಳ ಬಡತನದಲ್ಲಿ ವ್ಯಾಸಂಗ ಮಾಡಿ ಐಎಎಸ್ ಅಧಿಕಾರಿಯಾಗಿದ್ದರು. 1974ರ ಮಾರ್ಚ್ 27ರಂದು ಜನಿಸಿದ್ದ ಅವರು 2012ನೇ ಬ್ಯಾಚ್‌ನ ಕರ್ನಾಟಕ ಕೇಡರ್​ಐಎಎಸ್ ಅಧಿಕಾರಿ.

    ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರು ಕೆಲವು ದಿನಗಳ ಹಿಂದೆ ವರ್ಗಾವಣೆಗೊಂಡಿದ್ದರು. ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

    ಸಿಎಂ ಸಿದ್ದರಾಮಯ್ಯ ಸಂತಾಪ: ಮಹಾಂತೇಶ್ ಬೀಳಗಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ’ ಎಂದು ಹೇಳಿದ್ದಾರೆ.

    ‘ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಡಿಕೆಶಿ ಸಂತಾಪ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ‌ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ‌ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading