ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ( wayanad ) ಭಾಗದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 79.90 ಅಡಿಗಳಾಗಿದೆ. 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 16.41 ಟಿಎಂಸಿ ನೀರು ಸಂಗ್ರಹವಾಗಿದೆ.
ಒಳಹರಿವಿನ ಪ್ರಮಾಣ ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಹೊರಹರಿವನ್ನು ಮತ್ತಷ್ಟು ಹೆಚ್ಚಳ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರಬೇಕು. ತಮ್ಮ ತಮ್ಮ ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು. ಪ್ರವಾಹ ಪರಿಸ್ಥಿತಿ ಎದುರಾದರೆ ಕಾಳಜಿ ಕೇಂದ್ರಗಳಿಗೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿರುವ ಪರಿಣಾಮ ಹಲವು ಸೇತುವೆಗಳು ಮುಳುಗಡೆ ಭೀತಿಯಲ್ಲಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸೇತುವೆಗಳ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಂಗಾರು ಅಬ್ಬರ; ರಾಜ್ಯದ ಈ 6 ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


