ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್, ಹಲವು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆಯಲ್ಲದೆ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯ ನಡೆಸಿದೆ ಎಂಬುದು ದೇಶ- ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.
ಸಂವಿಧಾನ ದಿನಾಚರಣೆಯ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ನಡೆದ ಸಂವಿಧಾನ ಸನಾನ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ಪ್ರಧಾನಿ ನರೇಂದ್ರ ಮೋದಿಜೀ ಅವರದು ಎಂದರು.
ಸಂವಿಧಾನ ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ ಎಂದು ಹೇಳಿದರು.
ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನಾನ ಅಭಿಯಾನ ಆಚರಿಸಲಾಗುತ್ತಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ಈ ದೇಶದ ಹೆಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರರ ಪರಿಶ್ರಮ, ಬೆವರಿನ ಫಲಶ್ರುತಿಯ ಫಲವಾಗಿ ಸಮಾನತೆ, ಸ್ವಾವಲಂಬನೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಕೊಡಲಾಗಿದೆ. ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಪಾಲಿಗೆ ಒಂದು ಧರ್ಮಗ್ರಂಥ ಎಂದು ವಿಶ್ಲೇಷಿಸಿದರು. ನಮೆಲ್ಲರ ನೇತೃತ್ವದಲ್ಲಿ ಸಂವಿಧಾನಕ್ಕೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು. ಸಂವಿಧಾನವನ್ನು ರಕ್ಷಿಸುವ ಕರ್ತವ್ಯ ಪ್ರತಿಯೊಬ್ಬ ಭಾರತೀಯರದು ಎಂದು ಅವರು ನುಡಿದರು.
ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮಾಯಿ ಅವರು ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ- ಎಲ್ಲ ಆಯಾಮಗಳಲ್ಲಿ ಚರ್ಚೆ ಮಾಡಿ, ಬಾಬಾಸಾಹೇಬ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನವನ್ನು ಡಾ.ಅಂಬೇಡ್ಕರರು ನೀಡಿದ್ದು, ಅದು ಸಾರ್ವಕಾಲಿಕ; ಸದಾ ಪ್ರಸ್ತುತ ಎಂದು ವಿವರಿಸಿದರು. ಸಂವಿಧಾನದ ಕುರಿತು ಅಪಸ್ವರ ಬರಬಾರದು ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಸಂವಿಧಾನದ ಪೀಠಿಕೆಯ ಪಠಣ ಮಾಡಿಸಿದರು. ನವೆಂಬರ್ 26 ಅನ್ನು ಕಡೆಗಣಿಸಿದ ಷಡ್ಯಂತ್ರದ ಕುರಿತು ಅವರು ವಿವರಿಸಿದರು. ಮೋದಿಯವರು ಪ್ರಧಾನಿಗಳಾದ ಬಳಿಕ ಈ ದಿನವನ್ನು ಸಂವಿಧಾನ ದಿನವನ್ನಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಡಾ. ಅಂಬೇಡ್ಕರರ ಸಂವಿಧಾನವು ಇಡೀ ದೇಶದ ಮುನ್ನೋಟವನ್ನು ನೀಡಿದೆ ಎಂದು ವಿವರಿಸಿದರು.
ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಅವರು ಮಾತನಾಡಿ, ನವೆಂಬರ್ 26 ನಮೆಲ್ಲರಿಗೂ ವೈಭವದ, ಸಂಭ್ರಮದ ದಿನ. ಸಂವಿಧಾನ ರಚನೆಯ ಜವಾಬ್ದಾರಿಯನ್ನು ಡಾ. ಅಂಬೇಡ್ಕರರಿಗೆ ನೀಡಿದ್ದು, ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ರಚಿಸಿ ನೀಡಿದ್ದಾರೆ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ್, ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ಬಸವರಾಜ ಮತ್ತಿಮೊಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ, ಮುಖಂಡ ಜಗದೀಶ್ ಹಿರೇಮನಿ, ರಾಜ್ಯ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


